May 13, 2026

ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ರಾಜ್ಯ ಮಟ್ಟದ ಸಭೆ ಯಶಸ್ವಿ

ಸಿಂಧನೂರು: ಅಖಿಲ ಭಾರತ ಬಂಜಾರ ಸೇವಾ ಸಂಘ (ಎಐಬಿಎಸ್ಸೆಸ್) ಕರ್ನಾಟಕ ರಾಜ್ಯ ಮಟ್ಟದ ದುಂಡು ಮೇಜಿನ ಸಭೆ ಮೇ 10ರಂದು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಖಾಸಗಿ ಹೋಟೆಲ್‌ನಲ್ಲಿ ನಡೆಯಿತು.

ಸಭೆಗೆ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಿ. ರಾಮ ನಾಯಕ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಾಧ್ಯಕ್ಷ ವಿಜಯ್ ಜಾಧವ್ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಾನಸಿಂಗ ಚವ್ಹಾಣ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಭೆಯಲ್ಲಿ ರಾಜ್ಯ ಪದಾಧಿಕಾರಿಗಳು, ವಿವಿಧ ಜಿಲ್ಲೆಗಳ ಮುಖ್ಯಸ್ಥರು, ತಾಲ್ಲೂಕು ಅಧ್ಯಕ್ಷರು ಹಾಗೂ ಹಿರಿಯ ಕಾರ್ಯಕರ್ತರು ಭಾಗವಹಿಸಿ ಸಂಘಟನೆಯನ್ನು ಬಲಪಡಿಸುವುದು, ಸಮಾಜ ಕಲ್ಯಾಣ ಹಾಗೂ ಸಂಸ್ಥೆಯ ಘನತೆಯನ್ನು ಉಳಿಸುವ ಕುರಿತು ಚರ್ಚಿಸಿದರು.

ಕೆಲವರು ಸಂಸ್ಥೆಯ ಹೆಸರನ್ನು ದುರುಪಯೋಗಪಡಿಸಿಕೊಂಡು ಪದಾಧಿಕಾರಿಗಳೆಂದು ಹೇಳಿಕೊಳ್ಳುತ್ತಿರುವ ಬಗ್ಗೆ ಸಭೆಯಲ್ಲಿ ಆತಂಕ ವ್ಯಕ್ತಪಡಿಸಲಾಯಿತು. ಈ ಸಂಬಂಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಮುಖಂಡರು, ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ವಿಚಾರವನ್ನು ಉಲ್ಲೇಖಿಸಿ, ಪ್ರಕರಣದ ತನಿಖೆಯನ್ನು ಕಾನೂನುಬದ್ಧವಾಗಿ ಮುಂದುವರಿಸಬೇಕೆಂದು ಅಭಿಪ್ರಾಯಪಟ್ಟರು. ಈ ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳು ಇನ್ನೂ ತನಿಖೆಯಲ್ಲಿರುವುದಾಗಿ ತಿಳಿಸಲಾಯಿತು.

ಸಂಸ್ಥೆಯ ಹೆಸರಿನ ದುರುಪಯೋಗ ಹಾಗೂ ನಕಲಿ ನೇಮಕಾತಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿತ ಪೊಲೀಸ್ ಠಾಣೆಗಳಿಗೆ ದೂರು ನೀಡುವ ನಿರ್ಧಾರ ಕೈಗೊಳ್ಳಲಾಯಿತು. ಸಮುದಾಯ ಜಾಗೃತಿ ಮೂಡಿಸಲು ವಿವಿಧ ಜಿಲ್ಲೆಗಳಲ್ಲಿ ಪತ್ರಿಕಾಗೋಷ್ಠಿ ಆಯೋಜಿಸುವುದಕ್ಕೂ ಸಭೆಯಲ್ಲಿ ತೀರ್ಮಾನಿಸಲಾಯಿತು.

ಮುಂದಿನ ರಾಜ್ಯಮಟ್ಟದ ಬೃಹತ್ ಸಭೆಯನ್ನು ಯಾದಗಿರಿ ಜಿಲ್ಲೆಯಲ್ಲಿ ನಡೆಸಲು ನಿರ್ಧರಿಸಲಾಯಿತು.

ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಕೀಲ ಚಂದ್ರಶೇಖರ ಜಾಧವ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಸುಮಾರು 100ಕ್ಕೂ ಹೆಚ್ಚು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

Written by

ARVIND PAWAR

District Reporter

Leave a Reply

Your email address will not be published. Required fields are marked *

INDIAN PRESS UNION

Indian Press Union (IPU) A National Platform for Journalists and Media Professionals.

© 2026 All Rights Reserved IPU MEDIA ASSOCIATION